LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಾತಿ ಗಣತಿ ವರದಿ ವಿಚಾರವೀಗ ಕಾಂಗ್ರೆಸ್‌ ಹೈಕಮಾಂಡ್​ ಅಂಗಳ ತಲುಪಿದೆ

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ವರದಿ(ಜಾತಿ ಗಣತಿ ವರದಿ) ರಾಜ್ಯದಲ್ಲಿ ಭಾರಿ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾದ ಬೆನ್ನಲ್ಲೇ ಈ ವಿಚಾರವೀಗ ಕಾಂಗ್ರೆಸ್‌ ಹೈಕಮಾಂಡ್​ ಅಂಗಳ ತಲುಪಿದೆ.


ಒಕ್ಕಲಿಗ, ಲಿಂಗಾಯತ ನಾಯಕರು ವರದಿಯನ್ನು ಮರುಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ. ಹೀಗಾಗಿ ಪ್ರತಿಪಕ್ಷಗಳು ಇದನ್ನೇ ಅಸ್ತ್ರವಾಗಿಸಿಕೊಂಡು ಸರ್ಕಾರದ ಮೇಲೆ ಮುಗಿಬಿದ್ದಿವೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ವರದಿ ಕಾಂಗ್ರೆಸ್‌‍ ಹೈಕಮಾಂಡ್‌ ತಲುಪಿದೆ. ಹೈಕಮಾಂಡ್ ಸಲಹೆ, ಸೂಚನೆ ಪಡೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.


ಎರಡು ಬಾರಿ ಮುಂದೂಡಲ್ಪಟ್ಟಿದ್ದ ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಅಂತಿಮವಾಗಿ ಏ.11ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ಸ್ವಪಕ್ಷದ ಕೆಲ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಸಂಪುಟದಲ್ಲಿ ವರದಿ ಮಂಡಿಸುವುದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯನವರು, ಲೋಕಸಭೆ ಪ್ರತಿಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್‌‍ ವರಿಷ್ಠ ರಾಹುಲ್‌ ಗಾಂಧಿ ಅವರೊಂದಿಗೆ ಈ ಚರ್ಚಿಸಿದ್ದರು ಎಂದು ತಿಳಿದು ಬಂದಿದೆ.


ರಾಹುಲ್‌ ಗಾಂಧಿ ಅವರು ಗ್ರೀನ್‌ ಸಿಗ್ನಲ್‌ ಕೊಟ್ಟ ನಂತರವೇ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಿದ್ದಾರೆ. ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದ ಕಾರಣ ಮತ್ತೆ ಏ.17ರಂದು ವಿಶೇಷ ಸಚಿವ ಸಂಪುಟ ಸಭೆ ಕರೆದು ವರದಿ ಬಗ್ಗೆ ಚರ್ಚೆ ನಡೆಸಲಾಗಿದೆ. ಆದರೆ, ಚರ್ಚೆ ಅಪೂರ್ಣವಾಗಿರುವ ಕಾರಣ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದೆ.


ಕೆಲ ಸಚಿವರು ವರದಿಗೆ ವಿರೋಧ ವ್ಯಕ್ತಪಡಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿ ದೂರು ನೀಡುವ ಸಾಧ್ಯತೆಗಳಿವೆ. ಹೀಗಾಗಿ ಇದನ್ನು ತಡೆಯಲು ಮುಖ್ಯಮಂತ್ರಿಗಳು ಸಚಿವರ ಅಭಿಪ್ರಾಯಗಳನ್ನು ಕಾಗದದ ಮೇಲೆ ಸಂಗ್ರಹಿಸಿ ಹೈಕಮಾಂಡ್‌ಗೆ ಕಳುಹಿಸಲಿದ್ದಾರೆ. ಇದರ ಮಧ್ಯೆ ಸಂಪುಟ ಸಭೆಯಲ್ಲಿ ನಡೆದ ಬೆಳವಣಿಗೆಗಳ ಕುರಿತು ರಾಹುಲ್‌ ಗಾಂಧಿಯವರಿಗೆ ಮಾಹಿತಿ ನೀಡಲು ಮುಂದಾಗಿದ್ದು, ಇದೀಗ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡಲು ಸಿಎಂ ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ಲಿಂಗಾಯತ, ಒಕ್ಕಲಿಗ ಸಮುದಾಯದ ಸಚಿವರ ಆಕ್ಷೇಪ: ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯದ ಸಚಿವರುಗಳು ಜಾತಿ ಗಣತಿಗೆ ಆಕ್ಷೇಪಿಸಿ ಸಂಪುಟದಲ್ಲಿ ಧ್ವನಿ ಎತ್ತಿದ್ದರು. ಹಿಂದುಳಿದ, ಅಲ್ಪಸಂಖ್ಯಾತ, ದಲಿತ ಸಮಾಜದಿಂದ ಬಂದಿರುವ ಸಚಿವರುಗಳು ವರದಿ ಪರ ನಿಂತಿದ್ದರು. ಇನ್ನು ಕೆಲ ಸಚಿವರು ತಟಸ್ಥ ನಿಲುವು ತಳೆದವರಿದ್ದರು. ಈ ಎಲ್ಲ ಅಂಶಗಳ ಬಗ್ಗೆಯೂ ಹೈಕಮಾಂಡ್‌ಗೆ ವಿಸ್ತೃತವಾದ ಮಾಹಿತಿ ನೀಡಲಿದ್ದಾರೆ. ಲಿಂಗಾಯತರು ಮತ್ತು ವೀರಶೈವರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡುವ ಸಿದ್ದರಾಮಯ್ಯ ಪ್ರಸ್ತಾವನೆಯಿಂದಾಗಿ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಸೋಲು ಅನುಭವಿಸಿದ ವಿಷಯ ಇನ್ನೂ ಕಾಂಗ್ರೆಸ್ ವಲಯವನ್ನು ದುಸ್ವಪ್ನವಾಗಿ ಕಾಡುತ್ತಿದೆ.


ಸಂಪುಟ ಸಭೆಯಲ್ಲಿನ ಚರ್ಚೆಯ ಬೆನ್ನಲ್ಲೇ ಸಿದ್ದರಾಮಯ್ಯ ಅವರು, ರಾಜ್ಯದ 20-30 ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದ ಸ್ಥಾನಗಳು ಅಹಿಂದ ಮತಗಳಿಂದ ನಿರ್ಧರಿಸಲ್ಪಡುತ್ತವೆ ಎಂಬುದನ್ನು ಸಾಬೀತುಪಡಿಸಲು ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಜಾತಿ ಗಣತಿ ವರದಿಯನ್ನು ವರಿಷ್ಠರಿಗೆ ಸಲ್ಲಿಸಲು ಮುಂದಾಗಿದ್ದಾರೆ. ವರದಿ ಬಳಿಕ 2018ರಲ್ಲಿ ಕಾಂಗ್ರೆಸ್‌‍ ಸೋಲಿಗೆ ವೀರಶೈವ ಪ್ರತ್ಯೇಕ ಧರ್ಮದ ಸ್ಥಾನಮಾನದ ವಿಷಯವೇ ಕಾರಣ ಎಂಬ ಗ್ರಹಿಕೆಯನ್ನು ನಿವಾರಿಸಲು ಸಿದ್ದರಾಮಯ್ಯ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್