ಬಳ್ಳಾರಿ, ಸೆ.21: ಭಾರತೀಯ ಜನತಾ ಪಕ್ಷದ (ಬಿಜೆಪಿ) ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿಯಾಗಿ ಚಾಂದಿನಿ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಹಂಪಿ ರಮಣ ಅವರು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಅವರ ನೇತೃತ್ವದಲ್ಲಿ ಚಾಂದಿನಿ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿದರು. ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಹಂಪಿ ರಮಣ ಅವರು ಸೂಚಿಸಿದರು.
ನೇಮಕಾತಿಗೆ ಕೃತಜ್ಞತೆ ಸಲ್ಲಿಸಿದ ಚಾಂದಿನಿ, ಪಕ್ಷ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಮಹಿಳಾ ಕಾರ್ಯಕರ್ತರನ್ನು ಸಂಘಟಿಸಿ ಪಕ್ಷದ ಸಂಘಟನೆಯನ್ನು ತಳಮಟ್ಟದಲ್ಲಿ ಸದೃಢಗೊಳಿಸಲು ಶ್ರಮಿಸುವುದಾಗಿ ತಿಳಿಸಿದರು. ಪಕ್ಷದ ಸಿದ್ಧಾಂತ ಹಾಗೂ ಸಂಘಟನೆಯ ಆಶಯಗಳನ್ನು ಜನರಿಗೆ ತಲುಪಿಸಲು ಎಲ್ಲರ ಸಹಕಾರದೊಂದಿಗೆ ಕಾರ್ಯನಿರ್ವಹಿಸುವುದಾಗಿ ಹೇಳಿದರು.
ನೂತನ ಜವಾಬ್ದಾರಿ ವಹಿಸಿಕೊಂಡಿರುವ ಚಾಂದಿನಿ ಅವರಿಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ನಾಯ್ಡು, ಮಾಜಿ ಮಹಿಳಾ ಅಧ್ಯಕ್ಷೆ ಸುಗುಣ ಸೇರಿದಂತೆ ಮಹಿಳಾ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.