ಬಳ್ಳಾರಿ, ಆ. 04 ತುಂಗಭದ್ರಾ ಜಲಾಶಯದಲ್ಲಿ ದಿನದಿಂದ ದಿನಕ್ಕೆ ನೀರಿನ ಸಂಗ್ರಹ ಮತ್ತು ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 10ರೊಳಗೆ ಎಲ್ಲಾ ನೀರಾವರಿ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ತುಂಗಭದ್ರಾ ರೈತ ಸಂಘದ ರಾಜ್ಯಾಧ್ಯಕ್ಷ ದರೂರ್ ಪುರುಷೋತಮ್ ಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತುರ್ತಾಗಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆ ನಡೆಸಿ ರೈತರ ಹಿತದೃಷ್ಟಿಯಿಂದ ನೀರು ಬಿಡುಗಡೆಗೆ ನಿರ್ಧಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿರುವ ಕಾರಣ ರೈತರು ಭತ್ತ ಸೇರಿದಂತೆ ವಿವಿಧ ಬೆಳೆಗಳ ನಾಟಿ ಮತ್ತು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಹರಿಸದಿದ್ದರೆ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.
ತುಂಗಭದ್ರಾ ಜಲಾಶಯದಲ್ಲಿ ಆಗಸ್ಟ್ 3ರ ವೇಳೆಗೆ ನೀರಿನ ಮಟ್ಟ 1613.16 ಅಡಿ ತಲುಪಿದ್ದು, 44.190 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 57,785 ಕ್ಯೂಸೆಕ್ ತತ್ಕ್ಷಣದ ಒಳಹರಿವು ದಾಖಲಾಗಿದ್ದು, ಈ ಪರಿಸ್ಥಿತಿಯನ್ನು ಗಮನಿಸಿ ವಿಳಂಬವಿಲ್ಲದೆ ನೀರಾವರಿ ನೀರು ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮೋಕಾ ಸಣ್ಣ ಅಂಜಿನಪ್ಪ, ಶ್ರೀಧರ್, ವೀರಣಗೌಡ, ವೀರಭದ್ರ, ರಾಜಶೇಖರ್, ಬಸವರಾಜ್ ಸ್ವಾಮಿ, ಸಾಗರ್ ಗೌಡ, ಭೀಮಯ್ಯ ಸೇರಿದಂತೆ ರೈತ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.